ರಾಜ್ಯದ ಎಲ್ಲ ಕಡೆಗಳಲ್ಲಿ ಉತ್ತಮ ಮಳೆ -ಮುಖ್ಯಮಂತ್ರಿ
ಹುಬ್ಬಳ್ಳಿ ಜು.25: ರಾಜ್ಯದಲ್ಲಿ ಮುಂಗಾರು ಮಳೆಯು ಜೂನ್ ತಿಂಗಳಿನಲ್ಲಿ ಕೊರತೆಯಾಗಿದ್ದು, ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗಿದೆ. ರಾಜ್ಯದ ಎಲ್ಲ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು.
ಇಂದು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಹಾವೇರಿ ಜಿಲ್ಲೆಯಲ್ಲಿ ರೈತರಿಗೆ ಜೀವಹಾನಿಯಾದ ಬಗ್ಗೆ ವರದಿಯಾಗಿವೆ. 6 ರಿಂದ 7 ರೈತರಿಗೆ ಪ್ರಾಣಹಾನಿಯಾಗಿದೆ. ಹೀಗಾಗಿ ಇಲ್ಲಿಂದಲೇ ಸಮೀಕ್ಷೆ ಕೈಗೊಳ್ಳಲಾಗುವುದು. ಅತಿಯಾಗಿ ಮಳೆಯಾದ ಪ್ರದೇಶಗಳಿಗೆ ತಂಡವನ್ನು ಮಾಡಿಕೊಂಡು ಸಮೀಕ್ಷೆ ನಡೆಸಲಾಗುತ್ತದೆ. ಉಡುಪಿ, ಮಂಗಳೂರು ಹಾಗೂ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಇಂದು ಕೊಡಗು ಜಿಲ್ಲೆಯಲ್ಲಿ ಸಮೀಕ್ಷೆ ಕೈಗೊಂಡಿರುತ್ತಾರೆ. ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಹಾವೇರಿ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಪ್ರಕೃತಿ ವಿಕೋಪಗಳು, ಪ್ರವಾಹಗಳು, ಮಳೆ ಕೊರತೆ ಸಹಜವಾಗಿ ಆಗುತ್ತವೆ. ಜಗತ್ತಿನೆಲ್ಲೆಡೆ ಹವಾಮಾನ ಬದಲಾವಣೆ ಆಗುವುದು ಸಹಜ ಎಂದರು.
ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕು. ಯಾರಾದರೂ ಹಣ ತೆಗೆದುಕೊಂಡ ಬಗ್ಗೆ ದೂರು ಸಲ್ಲಿಸಿದರೆ ಅಂತಹವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಿಮಿನಲ್ ಮೊಕದ್ದಮೆ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯರಾದ ಜಗದೀಶ್ ಶೆಟ್ಟರ್, ಕಾನೂನು ಮತ್ತು ಸಂಸದೀಯ ವ್ಯವಹಾರ, ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ಶಾಸಕರಾದ ಎನ್.ಎಚ್.ಕೋನರೆಡ್ಡಿ, ಪ್ರಸಾದ ಅಬ್ಬಯ್ಯ ಸೇರಿದಂತೆ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.