ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭೇಟಿ

ಧಾರವಾಡ(ಕರ್ನಾಟಕ ವಾರ್ತೆ)ಮಾ.28: ಜಿಲ್ಲಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು, ಜಿಲ್ಲಾಧಿಕಾರಿ ನಿತೇಶ ಪಾಟೀಲ ಇಂದು ಬೆಳಿಗ್ಗೆ ನಗರದ ಬಾಸೆಲ್ ಮಿಷನ್ ಇಂಗ್ಲೀಷ್ ಮಾಧ್ಯಮ ಶಾಲೆ ಸೇರಿದಂತೆ ವಿವಿಧ ಶಾಲೆಗಳಲ್ಲಿನ ಎಸ್.ಎಸ್‍ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು 28,332 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.
ಪರೀಕ್ಷಾರ್ಥಿಗಳಿಗಾಗಿ ಜಿಲ್ಲೆಯಲ್ಲಿ ಒಟ್ಟು 113 ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೊದಲ ದಿನವಾದ ಇಂದು ಭಾಷಾ ವಿಷಯದ ಪರೀಕ್ಷೆಗೆ ಒಟ್ಟು 28,065 ವಿದ್ಯಾರ್ಥಿಗಳು ಹಾಜರಾಗಿದ್ದು 267 ಜನ ಗೈರುಹಾಜರಾಗಿದ್ದಾರೆ ಎಂದು ಅವರು ತಿಳಿಸಿದರು.
ಎಸ್‍ಎಸ್‍ಎಲ್‍ಸಿ ಬಾಹ್ಯ ಪರೀಕ್ಷೆ ತೆಗೆದುಕೊಂಡಿರುವ ಪರೀಕ್ಷಾರ್ಥಿಗಳಿಗಾಗಿ ಧಾರವಾಡ ನಗರದಲ್ಲಿ 3 ಖಾಸಗಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬಾಹ್ಯ ಪರೀಕ್ಷೆಗಾಗಿ ಒಟ್ಟು 1163 ವಿದ್ಯಾರ್ಥಿಗಳು ನೋಂದಾಯಿತರಾಗಿದ್ದಾರೆ. ಇಂದಿನ ಪರೀಕ್ಷೆಗೆ 1027 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿದ್ದು, 136 ಜನ ಗೈರು ಹಾಜರಾಗಿದ್ದಾರೆ.
ಜಿಲ್ಲೆಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುತ್ತಿವೆ. ಯಾವುದೇ ರೀತಿಯ ನಕಲು, ದುರ್ವತನೆ ಸೇರಿದಂತೆ ಯಾವುದೇ ಪ್ರಕರಣಗಳು ವರದಿಯಾಗಿರುವುದಿಲ್ಲ. ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆಯಲ್ಲಿ ಭಾಗವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಶಿಕ್ಷಣಾಧಿಕಾರಿ ಸುರೇಶ ಹುಗ್ಗಿ, ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ, ಎಸ್‍ಎಸ್‍ಎಲ್‍ಸಿ ಜಿಲ್ಲಾ ನೋಡೆಲ್ ಅಧಿಕಾರಿ ಪೂರ್ಣಿಮಾ ಮುಕ್ಕುಂದಿ, ವಿಷಯ ಪರಿವಿಕ್ಷಕ ಸಂಜಯ ಮಾಳಿ, ಬಾಸೆಲ್ ಮಿಷನ್ ಪ್ರೌಢ ಶಾಲೆಯ ಮುಖ್ಯಾಧ್ಯಾಪಕಿ ಇ.ಎಸ್. ತುಮಕೂರ, ಮಂಜುನಾಥ ಇತರರು ಇದ್ದರು.
