News

ಧಾರವಾಡ-ಹುಬ್ಬಳ್ಳಿಯಲ್ಲಿ ಸೆಕ್ಷನ್ 144: ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಒಳಪಡುವ ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ ಹಾಗೂ ಹುಬ್ಬಳ್ಳಿ ನಗರ ತಾಲೂಕುಗಳಲ್ಲಿ ಸೆಪ್ಪೆಂಬರ್ 01 ರ ಬೆಳಿಗ್ಗೆ 6 ಗಂಟೆಯಿಂದ ಸೆಪ್ಪೆಂಬರ್ 03 ರ ಸಾಯಂಕಾಲ 06 ಗಂಟೆಯವರೆಗೆ ಸಿ.ಆರ್.ಪಿ.ಸಿ ಕಾಯ್ದೆ, 1973ರ ಕಲಂ 144 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ, 1963ರ ಕಲಂ 35 ರಡಿ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ, ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮತ್ತು ಜಿಲ್ಲಾದಂಡಾಧಿಕಾರಿ ನಿತೇಶ ಪಾಟೀಲ ಅವರು ಇಂದು ಸಂಜೆ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು,
• ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ ಮತ್ತು ಹುಬ್ಬಳ್ಳಿ ನಗರ ತಾಲೂಕುಗಳ ವ್ಯಾಪ್ತಿಯಲ್ಲಿ ಐಪಿಸಿ 144 ರಡಿ ಪ್ರತಿಬಂದಕಾಜ್ಞೆ ಜಾರಿ ಮಾಡಲಾಗಿದ್ದು, ಆ ದಿನಗಳಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ, ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.

• ಚುನಾವಣಾ ಅಭ್ಯರ್ಥಿಗಳು, ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಬಹುದಾಗಿದ್ದು, ಅದರಲ್ಲಿ 05 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದ್ದಲ್ಲ.

• ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

• ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಪ್ರಚಾರ ಸ್ಥಳಗಳಿಗೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.

• ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

• ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.

• ಪ್ರಚಾರ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪದ್ರರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇದಿಸಲಾಗಿದೆ.

• ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

• ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಲಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.

• ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸುವುದು.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು.

ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯ ನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲವೆಂದು ಜಿಲ್ಲಾಧಿಕಾರಿಗಳು ಪ್ರತಿಬಂದಕಾಜ್ಞೆಯ ಆದೇಶದಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published.

Back to top button
Close