News In Kannada

ಪೊಲೀಸ್ ಗೌರವದೊಂದಿಗೆ ನಾಡೋಜ ಚೆನ್ನವೀರ ಕಣವಿ ಅಂತ್ಯಕ್ರಿಯೆ

ಕೇಂದ್ರ ಹಾಗೂ ರಾಜ್ಯದ ಸಚಿವರಿಂದ ಅಂತಿಮ ದರ್ಶನ

ಧಾರವಾಡ, ಫೆ.16: ಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಇಂದು (ಫೆ.16) ಬೆಳಿಗ್ಗೆ ನಿಧನರಾದರು. ಕಲ್ಯಾಣ ನಗರದ ನಿವಾಸ, ಕರ್ನಾಟಕ ಕಾಲೇಜು ಆವರಣದಲ್ಲಿ ಪಾರ್ಥಿವ ಶರೀರಕ್ಕೆ ಅಂತಿಮ ದರ್ಶನ ಏರ್ಪಡಿಸಲಾಗಿತ್ತು. ಸಂಜೆ ಕೆಲಗೇರಿ ಸಮೀಪದ “ಸೃಷ್ಠಿ” ತೋಟದಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಿತು. ಕೇಂದ್ರ ಹಾಗೂ ರಾಜ್ಯ ಸಚಿವರು, ಶಾಸಕರು, ಗಣ್ಯರು, ಸಾಹಿತಿಗಳು ಅಂತಿಮದರ್ಶನ ಪಡೆದು ಗೌರವ ಸಲ್ಲಿಸಿದರು.

ಬೆಳಿಗ್ಗೆ ಸುದ್ದಿ ತಿಳಿದ ಕೂಡಲೇ ಸತ್ತೂರಿನ ಎಸ್‍ಡಿಎಂ ಆಸ್ಪತ್ರೆಗೆ ಧಾವಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಡಾ.ಚೆನ್ನವೀರ ಕಣವಿ ಅವರ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು. ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಮತ್ತು ಅಂತ್ಯಕ್ರಿಯೆ ಕುರಿತು ನಿರ್ಧಾರ ಪ್ರಕಟಿಸಿದರು.

ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಡಾ.ಚೆನ್ನವೀರ ಕಣವಿ ಅವರ ಕಲ್ಯಾಣ ನಗರದ ಚೆಂಬೆಳಕು ನಿವಾಸಕ್ಕೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೊಗಲಾಯಿತು. ಗದುಗಿನ ತೋಂಟದ ಡಾ. ಸಿದ್ಧರಾಮ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಡಾ.ಕಣವಿ ಅವರ ಪುತ್ರರಾದ ಶಿವಾನಂದ, ಚಂದ್ರಮೌಳಿ, ಪ್ರಿಯದರ್ಶಿ, ಕರುಣಪ್ರಸಾದ ಹಾಗೂ ಪುತ್ರಿ ರಂಜನಾ ಗೋದಿ ತಮ್ಮ ಕುಟುಂಬದ ಸದಸ್ಯರು, ಬಂಧುಗಳೊಂದಿಗೆ ಪೂಜೆ ಸಲ್ಲಿಸಿದರು. ಸಾರ್ವಜನಿಕರ ದರ್ಶನಕ್ಕಾಗಿ ಕರ್ನಾಟಕ ಕಾಲೇಜು ಮುಖ್ಯ ಕಟ್ಟಡದ ಆವರಣದಲ್ಲಿ ಮಧ್ಯಾಹ್ನ ಡಾ. ಕಣವಿ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ವಿವಿಧ ಮಠಾಧೀಶರು, ಕರ್ನಾಟಕ ವಿದ್ಯಾವರ್ಧಕ ಸಂಘ, ಕನ್ನಡ ಸಾಹಿತ್ಯ ಪರಿಷತ್ತು, ಉತ್ತರ ಕರ್ನಾಟಕ ಲೇಖಕಿಯರ ಸಂಘ, ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾ ಘಟಕ, ವಿವಿಧ ಶಿಕ್ಷಣ ಸಂಸ್ಥೆಗಳು, ಕನ್ನಡ ಪರ ಸಂಘಟನೆಗಳು, ಸೇರಿದಂತೆ ಡಾ.ಚೆನ್ನವೀರ ಕಣವಿ ಅವರ ಆಪ್ತರು, ಅಭಿಮಾನಿಗಳು, ಶಿಷ್ಯರು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.

ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ, ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ, ಕವಿವಿ ಕುಲಪತಿ ಡಾ.ಕೆ.ಬಿ.ಗುಡಸಿ, ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಮುಂಡರಗಿ ತೋಂಟದಾರ್ಯ ಶಾಖಾ ಮಠದ ನಿಜಗುಣತೋಂಟದಾರ್ಯ, ಮನಗುಂಡಿಯ ಬಸವಾನಂದ ಸ್ವಾಮೀಜಿ, ಭೈರನಟ್ಟಿಯ ಶಾಂತವೀರ ಸ್ವಾಮೀಜಿ, ಕರ್ನಾಟಕ ಕಲಾ ಕಾಲೇಜು ಪ್ರಾಚಾರ್ಯ ಡಾ.ಡಿ.ಬಿ.ಕರಡೋಣಿ, ವಿಜ್ಞಾನ ಕಾಲೇಜು ಪ್ರಾಚಾರ್ಯ ಡಾ. ಶಿವಾನಂದ ಚೌಗಲಾ ಸೇರಿದಂತೆ ಅನೇಕರು ಡಾ.ಕಣವಿ ಅವರಿಗೆ ಪುಷ್ಪಗುಚ್ಚ ಇರಿಸಿ ಅಂತಿಮ ನಮನ ಸಲ್ಲಿಸಿದರು.

ಸಂಜೆ ಹೊತ್ತಿಗೆ ಡಾ.ಕಣವಿ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಕರ್ನಾಟಕ ಕಾಲೇಜು ಆವರಣದಿಂದ ಕೆಲಗೇರಿ ಹತ್ತಿರದಲ್ಲಿರುವ ಅವರ ತೋಟಕ್ಕೆ ಸಾಗಿತು. ಬಸವತತ್ವ ಹಾಗೂ ವೀರಶೈವ ಲಿಂಗಾಯತ ಪರಂಪರೆಯ ಆಚರಣೆಗಳ ಮೂಲಕ ಅಂತ್ಯಸಂಸ್ಕಾರ ನಡೆಯಿತು.

Please follow and like us:
Pin Share

Leave a Reply

Your email address will not be published.

Back to top button
Close